23.5 C
Karnataka
April 4, 2025
ಸುದ್ದಿ

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ



ನವದೆಹಲಿ, (ಡಿಸೆಂಬರ್ 26): ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್‌ ಸಿಂಗ್‌ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.

ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದ್ದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು. ಅವರ ಕೃತಿ ಭಾರತದ ರಫ್ತು ಸ್ಥಿತಿ ಮತ್ತು ಸ್ವಾವಲಂಬಿ ಸುಸ್ಥಿರ ಪ್ರಗತಿಯಲ್ಲಿ ಅದರ ಭವಿಷ್ಯ ಭಾರತದ ಆಂತರಿಕ ಆಧಾರಿತ ವ್ಯಾಪಾರ ನೀತಿಯ ಆರಂಭಿಕ ವಿಮರ್ಶೆಯಾಗಿತ್ತು.

ಡಾ. ಮನಮೋಹನಸಿಂಗ್ ಅವರ ಶೈಕ್ಷಣಿಕ ಜ್ಞಾನ ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಹಾಗೂ ದೆಹಲಿಯ ಪ್ರತಿಷ್ಠಿತ ಆರ್ಥಿಕ ಶಾಲೆಯಲ್ಲಿ ಬೋಧಕರಾಗಿ ಸಾಕಾರಗೊಂಡವು. ಯು.ಎನ್.ಸಿ.ಟಿ.ಎ.ಡಿ. ಸಚಿವಾಲಯದಲ್ಲಿ ಅವರು ಕೆಲಕಾಲ ಸೇವೆ ಸಲ್ಲಿಸಿದ್ದರು. ಇದರ ಫಲವಾಗಿ 1987ರಿಂದ 1990ರವರೆಗೆ ಅವರನ್ನು ಜೀನಿವಾದಲ್ಲಿನ ದಕ್ಷಿಣ ಆಯೋಗಕ್ಕೆ ಮಹಾಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಸ್ವತಂತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ಮೂಡಿತು. 1991ರಿಂದ 1996ರವರೆಗೆ ಡಾ. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಜನಪ್ರಿಯದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Related posts

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ಬೊಯಿಸರ್  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ

Mumbai News Desk

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk