ಪಣಜಿ: ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ (ಡಿ. 6) ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. ಬಾಗಾದಲ್ಲಿರುವ ‘ಬಿರ್ಚ್ ಬೈ ರೋಮಿಯೋ ಲೇನ್’ ಎಂಬ ಕ್ಲಬ್ನಲ್ಲಿ ಕಿಚನ್ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅವಘಡ ಸಂಭವಿಸಿದೆ ಎಂದು ಗೋವಾ ಪೊಲೀಸ್ ಮುಖ್ಯಸ್ಥ ಅಲೋಕ್ ಕುಮಾರ್ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಮೃತರೆಲ್ಲರೂ ಕ್ಲಬ್ ಸಿಬ್ಬಂದಿ ಎಂದು ತಿಳಿದು ಬಂದಿದ್ದು ಎಲ್ಲಾ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಕೆಲವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತರಾದ್ರೆ, ಒಂದಿಷ್ಟು ದಟ್ಟವಾದ ಹೊಗೆಯಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೇ ಉಸಿರುಗಟ್ಟಿ ಮೃತರಾಗಿದ್ದಾರೆ. ಕ್ಲಬ್ನ ಕೆಳಮಹಡಿಯಲ್ಲಿ ಈ ಸ್ಪೋಟ ಸಂಭವಿಸಿದೆ ಎಂದು ವರದಿಯಾಗಿದೆ. ಗ್ಯಾಸ್ ಸ್ಫೋಟ ಸಂಭವಿಸಿದ ವೇಳೆ ಕ್ಲಬ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರು. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಕ್ಲಬ್ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದವರಾಗಿದ್ದು, ಆ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೃತರಲ್ಲಿ ಮೂರರಿಂದ ನಾಲ್ಕು ಮಂದಿ ಪ್ರವಾಸಿಗರು ಕೂಡ ಇರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನೈಟ್ಕ್ಲಬ್ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರೋದೇ ಹೆಚ್ಚಿನ ಅವಘಡಕ್ಕೆ ಕಾರಣವಾಗಿದೆ. ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ. ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿ ಈ ಜನಪ್ರಿಯ ನೈಟ್ಕ್ಲಬ್ ಕಳೆದ ವರ್ಷ ಆರಂಭವಾಗಿತ್ತು. ಎಲ್ಲ 23 ಶವಗಳನ್ನು ಘಟನಾ ಸ್ಥಳದಿಂದ ಹೊರತೆಗೆಯಲಾಗಿದ್ದು, ಬಾಂಬೊಲಿಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ್ದು, ಇಡೀ ರಾತ್ರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.




