ಉಡುಪಿಯ 80 ಬಡಗುಬೆಟ್ಟು ಗ್ರಾಮದ ಸರ್ಕಾರಿ ಜಮೀನಿನಲ್ಲಿ ಜಿಲ್ಲಾಡಳಿತದ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ‘ಉಡುಪಿ ಕಂಬಳ’ದ ಶಂಕುಸ್ಥಾಪನೆ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ಸಂಸದರು ಮತ್ತು ಹಲವು ಶಾಸಕರು ಸೇರಿದಂತೆ ಒಟ್ಟು 37 ಮಂದಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಮಟ್ಟದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳಕ್ಕಾಗಿ ಕಾಯ್ದಿರಿಸಲಾದ ಜಾಗದಲ್ಲಿ ಫೆಬ್ರವರಿ 28ರಂದು ಶಂಕುಸ್ಥಾಪನೆ ನಡೆಸಲು ಕಂಬಳ ಸಮಿತಿ ನಿರ್ಧರಿಸಿತ್ತು. ಆದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಅಂದು ಬೆಳಿಗ್ಗೆಯಿಂದ ರಾತ್ರಿಯವರೆಗೆ ಆ ಪ್ರದೇಶದಲ್ಲಿ ಸೆಕ್ಷನ್ 163 BNSS ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದರು.
ಈ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ, ನಿಯಮಗಳನ್ನು ಮೀರಿ ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಉಡುಪಿ ತಹಶೀಲ್ದಾರ್ ಪಿ.ಆರ್. ಗುರುರಾಜ್ ದೂರು ನೀಡಿದ್ದಾರೆ. ಈ ದೂರಿನನ್ವಯ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ರಾಜೇಶ್ ನಾಯ್ಕ ಹಾಗೂ ವಿಧಾನ ಪರಿಷತ್ ಸದಸ್ಯ ಧನಂಜಯ್ ಸರ್ಜಿ ಮತ್ತು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಸೇರಿದಂತೆ ಹಲವರ ಮೇಲೆ ಬಿಎನ್ಎಸ್ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. ಸರ್ಕಾರಿ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ ಭೂಮಿಯನ್ನು ಸಮತಟ್ಟುಗೊಳಿಸಿದ ಆರೋಪವೂ ಇವರ ಮೇಲಿದೆ.




