ವಿಶ್ವ :
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿದ್ದು, ಇರಾನ್ ಬಂದರುಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನೌಕಾ ದಿಗ್ಬಂಧನವನ್ನು ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಹಡಗುಗಳಿಗೆ ಶೇಕಡಾ 20 ರಷ್ಟು ಸುಂಕ ವಿಧಿಸುವುದಾಗಿ ಅವರು ತಿಳಿಸಿದ್ದಾರೆ. ಈ ನಡುವೆ ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ದೇಶದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತೀಯ ಮೂಲದ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನ ಗಾಯಗೊಂಡಿದ್ದಾರೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನೇತೃತ್ವದಲ್ಲಿ ಯುರೋಪ್ ಖಂಡವನ್ನು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ರಕ್ಷಿಸಲು 10 ದೇಶಗಳ ಪ್ರಮುಖ ಒಕ್ಕೂಟವೊಂದನ್ನು ರಚಿಸಲಾಗಿದೆ. ಇಂಗ್ಲೆಂಡ್, ಜರ್ಮನಿ, ಇಟಲಿ ಮತ್ತು ಫ್ರಾನ್ಸ್ ಸೇರಿದಂತೆ ಒಟ್ಟು ಹತ್ತು ರಾಷ್ಟ್ರಗಳು ಒಟ್ಟಾಗಿ ಈ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಕೈಜೋಡಿಸಿವೆ. ಇದೇ ವೇಳೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಉಕ್ರೇನ್‌ನಲ್ಲೇ ಫ್ರೆಂಚ್ ನಿರ್ಮಿತ ಕ್ರೂಸ್ ಕ್ಷಿಪಣಿಗಳು ಮತ್ತು ವಾಯು ರಕ್ಷಣಾ ಸಾಧನಗಳನ್ನು ತಯಾರಿಸಲು ಅನುಮತಿ ನೀಡುವುದಾಗಿ ಪ್ರಕಟಿಸಿದ್ದಾರೆ.
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ಎದುರಾಗಿದ್ದು, ಸೌದಿ ಅರೇಬಿಯಾ ದೇಶವು ಏಷ್ಯಾ ಖಂಡದ ಗ್ರಾಹಕರಿಗೆ ಮಾರಾಟ ಮಾಡುವ ತನ್ನ ಅರಬ್ ಲೈಟ್ ಕಚ್ಚಾ ತೈಲದ ದರದಲ್ಲಿ ಭಾರಿ ಕಡಿತವನ್ನು ಘೋಷಿಸಿದೆ. ಭಾರತದ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಹೊಂದುತ್ತಿರುವ ಹಿಡಿತವನ್ನು ತಡೆಯಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ತೈಲ ಬೇಡಿಕೆ ಕಡಿಮೆಯಾಗುತ್ತಿರುವುದನ್ನು ಸರಿದೂಗಿಸಲು ಸೌದಿ ಈ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ.
ಹಾಲಿವುಡ್ ಮತ್ತು ಆಸ್ಟ್ರೇಲಿಯಾದ ಜನಪ್ರಿಯ ಚಲನಚಿತ್ರಗಳಲ್ಲಿ ನಟಿಸಿ ಜಾಗತಿಕವಾಗಿ ಮನೆಮಾತಾಗಿದ್ದ ನ್ಯೂಜಿಲೆಂಡ್ ಮೂಲದ ಖ್ಯಾತ ಹಿರಿಯ ನಟ ಸ್ಯಾಮ್ ನೀಲ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರಧಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.
ದೇಶ :
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) 2028-29ರ ಅವಧಿಯ ತಾತ್ಕಾಲಿಕ ಸದಸ್ಯತ್ವಕ್ಕಾಗಿ ಭಾರತವು ತನ್ನ ಅಧಿಕೃತ ಪ್ರಚಾರ ಕಾರ್ಯವನ್ನು ನ್ಯೂಯಾರ್ಕ್‌ನಲ್ಲಿ ಅದ್ಧೂರಿಯಾಗಿ ಆರಂಭಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಈ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಜಾಗತಿಕ ಶಾಂತಿ, ನಂಬಿಕೆ ಮತ್ತು ಸಮಗ್ರತೆಯನ್ನು ಒಳಗೊಂಡ ಭಾರತದ ‘ಶಾಂತಿ’ (SHANTI) ಕಾರ್ಯಸೂಚಿಯನ್ನು ಜಗತ್ತಿನ ಮುಂದೆ ಪ್ರಸ್ತುತಪಡಿಸಿದರು.
ಕಾನೂನು ಮತ್ತು ನ್ಯಾಯಾಂಗ ವಲಯದಲ್ಲಿ ಮಹತ್ವದ ತೀರ್ಪೊಂದನ್ನು ನೀಡಿರುವ ಸುಪ್ರೀಂ ಕೋರ್ಟ್, ಪೌರತ್ವ ಮತ್ತು ವಿದೇಶಿ ಪ್ರಜೆಗಳ ಗುರುತಿಸುವಿಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಕಾನೂನುಬದ್ಧ, ನಿಷ್ಪಕ್ಷಪಾತ ಮತ್ತು ಸೂಕ್ತ ಕಾರಣಗಳೊಂದಿಗೆ ಕೂಡಿರಬೇಕು ಎಂದು ಸ್ಪಷ್ಟಪಡಿಸಿದೆ. ಅಸ್ಸಾಂ ಉಚ್ಚ ನ್ಯಾಯಾಲಯವು ಈ ಹಿಂದೆ ನೀಡಿದ್ದ 27 ತೀರ್ಪುಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಈ ಪ್ರಕರಣಗಳನ್ನು ಮರುಪರಿಶೀಲಿಸುವಂತೆ ಸೂಚಿಸಿದೆ.
ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿಷಯಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹಾಗೂ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹಾಕಿದ್ದ ಆರೋಪದಡಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಸಮಾಜವಾದಿ ಪಕ್ಷದ ನಾಯಕ ಅರವಿಂದ್ ಉಪೇಂದ್ರ ಶುಕ್ಲಾ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ಗೆದ್ದು ಬೀಗಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಇನ್ನು ಪುರುಷರ ಕ್ರಿಕೆಟ್ ವಿಭಾಗದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪುನರಾಗಮನದೊಂದಿಗೆ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವು ಇಂದು ನಡೆಯಲಿದೆ
ಕರ್ನಾಟಕ :
ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಬೇಡಿಕೆ ಹಾಗೂ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನಗಳ ಹಿನ್ನೆಲೆಯಲ್ಲಿ ಜುಲೈ 15 ರಂದು ಮಹತ್ವದ ಸಭೆ ನಡೆಯಲಿದ್ದು, ಆ ಸಭೆಯ ಬಳಿಕ ನೀರು ಬಿಡುಗಡೆ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಕೆಪಿಎಸ್‌ಸಿ ಮುಖ್ಯಸ್ಥರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದರ ನಡುವೆ ಬೆಂಗಳೂರಿನ ಬಿಡದಿ ಉಪನಗರ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯ ಭಾಗವಾಗಿ ಪರಿಶೀಲನೆಗೆ ಆಗಮಿಸಿದ್ದ ಕಂದಾಯ ಅಧಿಕಾರಿಗಳನ್ನು ಸ್ಥಳೀಯ ಮಹಿಳಾ ರೈತರು ಪೊರಕೆ ಹಿಡಿದು ಅಟ್ಟಾಡಿಸಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಭಾರೀ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಕೇಂದ್ರ ಶಿಕ್ಷಣ ಸಚಿವಾಲಯವು ಬಿಡುಗಡೆ ಮಾಡಿರುವ ಇತ್ತೀಚಿನ ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆಯ (AISHE) ವರದಿಯ ಪ್ರಕಾರ, ವಿದೇಶಿ ವಿದ್ಯಾರ್ಥಿಗಳನ್ನು ಆಕರ್ಷಿಸುವಲ್ಲಿ ಕರ್ನಾಟಕ ರಾಜ್ಯವು ಇಡೀ ದೇಶದಲ್ಲೇ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.
ರಾಜ್ಯದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸುಮಾರು ಹತ್ತು ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಬೆಂಗಳೂರು ನಗರದಲ್ಲಿ ತುರ್ತು ಸಹಾಯಕ್ಕಾಗಿ ಇರುವ ನಮ್ಮ 112 ಪೊಲೀಸ್ ಸಹಾಯವಾಣಿ ತಂಡವು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಕಣ್ಮರೆಯಾಗಿದ್ದ ಮಗುವನ್ನು ಪೋಷಕರೊಂದಿಗೆ ಸೇರಿಸುವುದರ ಜೊತೆಗೆ ಆರು ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಚಿಲ್ಲರೆ ಹಣದ ಕೊರತೆಯ ನೆಪ ಒಡ್ಡಿ ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸಬಾರದು ಎಂದು ನಿರ್ವಾಹಕರಿಗೆ ಕಡಕ್ ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯಗಳನ್ನು ಅಕ್ರಮವಾಗಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸುರಿಯುತ್ತಿದ್ದವರ ವಿರುದ್ಧ ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಒಂದೇ ದಿನದಲ್ಲಿ 212 ಕ್ಕೂ ಹೆಚ್ಚು ನೋಟಿಸ್‌ಗಳನ್ನು ಜಾರಿಗೊಳಿಸಿದ್ದಾರೆ. ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.
ಮುಂಬೈ :
.
ಮುಂಬೈನಲ್ಲಿ ಜುಲೈ ಆರಂಭದಲ್ಲಿ ಸುರಿದ ಭಾರಿ ಮಳೆಯ ನಂತರ ನಗರದ ವಿಪತ್ತು ನಿರ್ವಹಣೆ ಮತ್ತು ನಗರಾಭಿವೃದ್ಧಿ ಯೋಜನೆಗಳ ಬಗ್ಗೆ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಹವಾಮಾನ ಬದಲಾವಣೆಯಿಂದಾಗಿ ಮುಂಬರುವ ದಿನಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ಮುಂಬೈನಂತಹ ಮಹಾನಗರಗಳು ಇಂತಹ ಪರಿಸ್ಥಿತಿಯನ್ನು ಎದುರಿಸಲು ಎಷ್ಟು ಸಜ್ಜಾಗಿವೆ ಎಂಬ ಪ್ರಶ್ನೆ ಎದ್ದಿದೆ.
ಉಪನಗರದ ಅಂಧೇರಿ ಪಶ್ಚಿಮದ ಡಿ.ಎನ್. ನಗರದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಖಾಲಿ ನಿವೇಶನವೊಂದರಲ್ಲಿ ಮಳೆ ನೀರು ತುಂಬಿ ಸೃಷ್ಟಿಯಾಗಿದ್ದ ಆಳವಾದ ಗುಂಡಿಗೆ ಬಿದ್ದು ದಿನೇಶ್ ಹರಿಜನ್ ಎಂಬ ಹತ್ತು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಆರೋಪಿಗಳಾದ ಪವನ್ ಯಾದವ್ ಮತ್ತು ಹರಿಓಂ ಪಾನು ಎಂಬುವವರನ್ನು ಭಿವಂಡಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಲಡ್ಕಿ ಬಹಿನ್ ಯೋಜನೆ’ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಚುನಾವಣೆಗೂ ಮುನ್ನ ಮಹಿಳೆಯರನ್ನು ಓಲೈಸಿದ ಸರ್ಕಾರ, ಅಧಿಕಾರ ಸಿಗುತ್ತಿದ್ದಂತೆ ಬರೋಬ್ಬರಿ 92 ಲಕ್ಷ ಮಹಿಳೆಯರನ್ನು ಈ ಯೋಜನೆಯಿಂದ ಹೊರಗಿಟ್ಟಿದೆ ಎಂದು ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಮಹಿಳೆಯರಿಗೆ ಮಾಡಿದ ದ್ರೋಹ ಎಂದು ಕರೆದಿದ್ದಾರೆ.
ಗ್ರಾಹಕರಿಗೆ ಕೊಂಚ ನಿರಾಳ ತರುವ ಸುದ್ದಿಯೊಂದಿದ್ದು, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಮುಂಬೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು ಹಬ್ಬದ ಸೀಸನ್‌ಗೂ ಮುನ್ನ ಗ್ರಾಹಕರಿಗೆ ಖರೀದಿಗೆ ಉತ್ತಮ ಅವಕಾಶ ಕಲ್ಪಿಸಿದೆ.
ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111.21 ರೂಪಾಯಿ ಹಾಗೂ ಡೀಸೆಲ್ ಬೆಲೆ 97.83 ರೂಪಾಯಿಗಳ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದೆ.
ಉಡುಪಿ :
ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 73,355 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ. ಈ ಮೂಲಕ ಸುಮಾರು 21.06 ಕೋಟಿ ರೂಪಾಯಿಗಳಷ್ಟು ಮೊತ್ತದ ಪರಿಹಾರ ಹಾಗೂ ರಾಜೀ ಸಂಧಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರಲ್ಲಿ ಚೆಕ್ ಬೌನ್ಸ್, ವಾಹನ ಅಪಘಾತ ವಿಮೆ ಕ್ಲೈಮ್ ಮತ್ತು ಸಿವಿಲ್ ವಿವಾದಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಆಗುಂಬೆ ಹಾಗೂ ಹುಲಿಕಲ್ ಘಾಟಿ ರಸ್ತೆಗಳಲ್ಲಿ ಸಂಚಾರ ಕಠಿಣವಾಗಿದೆ. ಘಾಟಿ ರಸ್ತೆಯುದ್ದಕ್ಕೂ ಅಲ್ಲಲ್ಲಿ ಸಣ್ಣಪುಟ್ಟ ಬಂಡೆಗಳು ಉರುಳುತ್ತಿದ್ದು, ರಸ್ತೆಯ ಮೇಲೆ ಪಾಚಿ ಹರಡಿ ವಾಹನಗಳು ಜಾರುತ್ತಿರುವುದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿ ಚಲಿಸುವಂತೆ ಸೂಚಿಸಲಾಗಿದೆ.
ಮಲ್ಪೆ ಹಾಗೂ ಕರಾವಳಿಯ ಇತರ ಮೀನುಗಾರಿಕಾ ವಲಯದಲ್ಲಿ ಮಳೆ ಕೊರತೆ ಮತ್ತು ಹವಾಮಾನ ಏರುಪೇರಿನಿಂದಾಗಿ ನಾಡದೋಣಿ ಮೀನುಗಾರರು ಕಡಲಿಗಿಳಿಯಲು ಹಿಂಜರಿಯುತ್ತಿದ್ದು, ಮತ್ಸ್ಯೋದ್ಯಮದ ಮೇಲೆ ಬರದ ಛಾಯೆ ಆವರಿಸಿದೆ.
ಮಣಿಪಾಲದ ಪೆರಂಪಳ್ಳಿ ಸರ್ಕಲ್ ಬಳಿ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ, ಜಾತಿ ನಿಂದನೆ ಮಾಡಿ 8 ಲಕ್ಷ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟು ಬೆದರಿಕೆ ಹಾಕಿದ ಘಟನೆ ನಡೆದಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಹೊಸ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಉಡುಪಿ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ವತಿಯಿಂದ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಂಡ್ ಆರ್ಕಿಟೆಕ್ಟ್ಸ್, ಕ್ರೆಡಾಯಿ ಹಾಗೂ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ- ಉಡುಪಿ ಸಹಯೋಗದಲ್ಲಿ ಇತ್ತೀಚೆಗೆ ‘ಉಡುಪಿ ವಿಷನ್ 20-30-35’ ಚಿಂತನ ಮಂಥನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ವಿಚಾರಗಳ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಉದ್ಯಮಿಗಳು ಚರ್ಚೆ ನಡೆಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಗಂಭೀರ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ :
ರಾಜ್ಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮುಂಬರುವ ಜುಲೈ 29ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಈ ಮೂಲಕ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಿದೆ. ಈ ಸಭೆಯಲ್ಲಿ ಕರಾವಳಿ ಭಾಗದ ಪ್ರವಾಸೋದ್ಯಮ, ಕಾನೂನು ಸುವ್ಯವಸ್ಥೆ, ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಮತ್ತು ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಗಂಭೀರ ಚರ್ಚೆ ನಡೆಯಲಿದೆ. ಮಂಗಳೂರಿನ ಮಂಗಲಾ ಕಾರ್ನಿಷ್ ರಸ್ತೆಯನ್ನು 10 ಕಿಲೋಮೀಟರ್ ಉದ್ದದಲ್ಲಿ 100 ಅಡಿ ಅಗಲಕ್ಕೆ ವಿಸ್ತರಿಸುವ ಸುಮಾರು 1,000 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ದೊರೆಯುವ ಸಾಧ್ಯತೆಯೂ ಇದೆ.
ಮಂಗಳೂರು ನಗರದಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳನ್ನು ಉರ್ವಾ ಮತ್ತು ಸುರತ್ಕಲ್ ಠಾಣಾ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನಗರದ ವಿವಿಧೆಡೆ ಪೊಲೀಸ್ ಪರಿಶೀಲನೆ ಚುರುಕುಗೊಂಡಿದ್ದು, ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿರುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
ಕೋರ್ಟ್‌ನಿಂದ ಜಾರಿಯಾಗಿದ್ದ 14 ಬಂಧನ ವಾರಂಟ್‌ಗಳನ್ನು ತಪ್ಪಿಸಿಕೊಂಡು ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಚಂದ್ರಶೇಖರ್ ಲಿಂಗರಾಜು ಬೋವಿ ಎಂಬಾತನನ್ನು ಕಂಕನಾಡಿ ನಗರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆರೋಪಿಯು ನಿರಂತರವಾಗಿ ತನ್ನ ವಿಳಾಸವನ್ನು ಬದಲಾಯಿಸುತ್ತಾ ಪೊಲೀಸರಿಗೆ ದಾರಿ ತಪ್ಪಿಸುತ್ತಿದ್ದರೂ, ಖಚಿತ ಮಾಹಿತಿ ಆಧರಿಸಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಮೈದಾಲು ಎಂಬಲ್ಲಿ ಕಂಕನಾಡಿ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.





