ಮಾಜಿ ಸಚಿವ ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಭಾನುವಾರ ಅಪಘಾತ ಸಂಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಸಾಣೂರು ಜಂಕ್ಷನ್ ಬಳಿ ಮಧ್ಯಾಹ್ನ ಸುಮಾರು 3.30ರ ವೇಳೆಗೆ ಈ ಅಪಘಾತ ನಡೆದಿದೆ.
ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ರಮಾನಾಥ್ ರೈ ಹಾಗೂ ಇತರರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ರಮಾನಾಥ್ ರೈ ಅವರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ ಅವರ ಆಪ್ತ ಸಹಾಯಕರಿಗೆ ಗಾಯಗಳಾಗಿದ್ದು, ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ತಕ್ಷಣ ಕಾರ್ಕಳದ ಟಿ.ಎಂ.ಎ. ಪೈ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ತಿಳಿದು ಕಾರ್ಕಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ವಾಹನ ಸಂಚಾರವನ್ನು ಸುಗಮಗೊಳಿಸಿ, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.




