ಮಂಗಳೂರು: ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯನ್ನಾಗಿ ಅಂಗೀಕರಿಸಿರುವ ಹಿನ್ನೆಲೆಯಲ್ಲಿ, ಪ್ರತಿವರ್ಷ ಸೆಪ್ಟೆಂಬರ್ 18ರಂದು ‘ತುಳು ದಿನ’ (ತುಳು ದಿವಸ)ವನ್ನಾಗಿ ಆಚರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದರು.
ನಗರದ ನೆಹರು ಮೈದಾನದಲ್ಲಿ ಇಂದು, ಭಾನುವಾರ (ನ.1) ನಡೆದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದ ಅವರು, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದ ಈ ಮಹತ್ವದ ನಿರ್ಧಾರದಿಂದ ತುಳುವರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ತುಳು ಭಾಷೆಗೆ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕಲ್ಪಿಸಿರುವುದು, ಅದನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿಯೂ ಮಹತ್ವದ ಹೆಜ್ಜೆಯಾಗಿದೆ. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರೆಯಬೇಕು ಎಂಬ ತುಳುವರ ಬಹುಕಾಲದ ಕನಸು ಈಡೇರಿದಂತಾಗಿದೆ ಎಂದು ಅವರು ತಿಳಿಸಿದರು.



